Home » ಶಿಕ್ಷಣ » ಪರೀಕ್ಷಾ ದಿನಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ – KSRTC ಘೋಷಣೆ

ಪರೀಕ್ಷಾ ದಿನಗಳಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ – KSRTC ಘೋಷಣೆ

ಬೆಂಗಳೂರು/ರಾಜ್ಯ:2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮಹತ್ವದ ಸೌಲಭ್ಯ ಒದಗಿಸಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಸಂಸ್ಥೆಗಳ ಹೊರತಾಗಿ ಇತರ ಸ್ಥಳಗಳಲ್ಲಿ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುವುದರಿಂದ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಹಾಗೂ ಮರಳುವಾಗ ದ್ವಿತೀಯ ಪಿಯುಸಿ ಪ್ರವೇಶ ಪತ್ರ (Hall Ticket) ತೋರಿಸಿ KSRTC ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಈ ಸಂಬಂಧ ಎಲ್ಲಾ ಚಾಲಕರು ಮತ್ತು ನಿರ್ವಾಹಕರಿಗೆ ವಿದ್ಯಾರ್ಥಿಗಳನ್ನು ಪ್ರವೇಶ ಪತ್ರದ ಆಧಾರದ ಮೇಲೆ ಪ್ರಯಾಣಿಸಲು ಅನುಮತಿಸುವಂತೆ ಸೂಚನೆ ನೀಡಲಾಗಿದೆ. ಬಸ್ಸುಗಳ ಕಾರ್ಯಾಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳು ಇರುವಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಗತ್ಯವಿದ್ದರೆ ಕೋರಿಕೆ ನಿಲುಗಡೆ (Request Stop) ನೀಡಲು ಕ್ರಮ ಕೈಗೊಳ್ಳಲಾಗುತ್ತದೆ.
ಇದಲ್ಲದೆ, ಈ ಮಾಹಿತಿಯನ್ನು ಎಲ್ಲಾ ಘಟಕಗಳು ಹಾಗೂ ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನಿಗಮ ಸೂಚಿಸಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This