Home » ಬೀದರ ಜಿಲ್ಲೆ » ಸಮಾಜ ಸೇವಕರಿಗೆ ಸುವರ್ಣಾವಕಾಶ – ರಾಜ್ಯ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ

ಸಮಾಜ ಸೇವಕರಿಗೆ ಸುವರ್ಣಾವಕಾಶ – ರಾಜ್ಯ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ

ಪ್ರತಿ ವರ್ಷ ಏಪ್ರಿಲ್ 05 ರಂದು ಡಾ. ಬಾಬು ಜಗಜೀವನ ರಾಂವ ಅವರ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ 14 ರಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಮಹತ್ವದ ದಿನಾಚರಣೆಗಳ ಅಂಗವಾಗಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗ (ST) ಸಮುದಾಯಗಳ ಶ್ರೇಯಸ್ಸಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಪ್ರೋತ್ಸಾಹ ನೀಡಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಸರ್ಕಾರ ಉದ್ದೇಶಿಸಿದೆ.

ಸಮಾಜದ ಹಿಂದುಳಿದ ವರ್ಗಗಳ ಶಿಕ್ಷಣ, ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಸಂಘಟನೆ, ಜಾಗೃತಿ ಮೂಡಿಸುವಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ, ಬೀದರ ಇಲ್ಲಿ ಪಡೆದುಕೊಳ್ಳಬಹುದು.

ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 10ರೊಳಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ನೌಬಾದ, ಬೀದರ ಇಲ್ಲಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ, ಬೀದರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This